ಯಾವ ಮೋಹನ ಮುರಳಿ



ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು?
          ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು?


ಹೂವು ಹಾಸಿಗೆ, ಚಂದ್ರ, ಚಂದನ, ಬಾಹುಬಂಧನ ಚುಂಬನ;
          ಬಯಕೆತೋಟದ ಬೇಲಿಯೊಳಗೆ ಕರಣಗಣದೀ ರಿಂಗಣ;


ಒಲಿದ ಮಿದುವೆದೆ, ರಕ್ತ ಮಾಂಸದ ಬಿಸಿದುಸೋಂಕಿನ ಪಂಜರ;
          ಇಷ್ಟೇ ಸಾಕೆಂದಿದ್ದೆಯಲ್ಲೋ! ಇಂದು ಏನಿದು ಬೇಸರ?


ಏನಿದೇನಿದು ಹೊರಳುಗಣ್ಣಿನ ತೇಲುನೋಟದ ಸೂಚನೆ?
          ಯಾವ ಸುಮಧುರ ಯಾತನೆ? ಯಾವ ದಿವ್ಯ ಯಾಚನೆ?


ಮರದೊಳಡಗಿದ ಬೆಂಕಿಯಂತೆ ಎಲ್ಲೊ ಮಲಗಿದ ಬೇಸರ;
          ಏನೋ ತೀಡಲು ಏನೋ ತಾಗಲು ಹೊತ್ತಿ ಉರಿವುದು ಕಾತರ.


ಸಪ್ತಸಾಗರದಾಚೆಯೆಲ್ಲೋ ಸುಪ್ತಸಾಗರ ಕಾದಿದೆ,
          ಮೊಳೆಯದಲೆಗಳ ಮೂಕ ಮರ್ಮರ ಇಂದು ಇಲ್ಲಿಗು ಹಾಯಿತೆ?


ವಿವಶವಾಯಿತು ಪ್ರಾಣ; ಹಾ! ಪರವಶವು ನಿನ್ನೀ ಚೇತನ;
          ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೆ ಜೀವನ?


ಯಾವ ಮೋಹನ ಮುರಳಿ ಕರೆಯಿತು ಇದ್ದಕಿದ್ದೊಲೆ ನಿನ್ನನು?
          ಯಾವ ಬೃಂದಾವನವು ಚಾಚಿತು ತನ್ನ ಮಿಂಚಿನ ಕೈಯನು?


                                                           - ಗೋಪಾಲಕೃಷ್ಣ ಅಡಿಗ 

1 ಕಾಮೆಂಟ್‌:

ನಿಮ್ಮ ಉನ್ಮಾದದ ನಶೆ ನಮ್ಮೊಂದಿಗಿಷ್ಟು ಹಂಚಿಕೊಳ್ರಿ....